ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆಗೆ ವಿನಯ್ ತಾಂದ್ಲೆ ಖಂಡನೆ

ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆಗೆ ವಿನಯ್ ತಾಂದ್ಲೆ ಖಂಡನೆ

ಶಿವಮೊಗ್ಗ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಅವರು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಶಿಕ್ಷಣವಿಲ್ಲದ ಶಿಕ್ಷಣ ಸಚಿವ ಎಂದು ಹೇಳಿರುವುದನ್ನು ಕಾಂಗ್ರೆಸ್ ಯುವ ಮುಖಂಡ ವಿನಯ್ ತಾಂದ್ಲೆ ಖಂಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ರವರು ಶಿಕ್ಷಣ ಸಚಿವರಿಗೆ ಶಿಕ್ಷಣವಿಲ್ಲ ಎಂದು ಹೇಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸಿದ್ದಾರೆ. ಮಧು ಬಂಗಾರಪ್ಪ ಅವರು ಪದವಿಪೂರ್ವ ಶಿಕ್ಷಣ ಪಡೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ, ಅವರು ಎಲ್ಲಿಯೂ ತಾವು ಉನ್ನತ ವ್ಯಾಸಂಗ ಮಾಡಿದ್ದೇನೆ ಎಂದು ಸುಳ್ಳು ಸರ್ಟಿಫಿಕೇಟ್ ಕೊಟ್ಟಿಲ್ಲ. ಸುಳ್ಳು ದಾಖಲೆ ಕೊಡುವುದು ಕಾಂಗ್ರೆಸ್ ಸಂಸ್ಕತಿಯೂ ಅಲ್ಲ. ಪ್ರಜಾಪ್ರತಿನಿಧಿಯಾಗಿ ಶಿಕ್ಷಣ ಸಚಿವರಾಗಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿದೆ. ಆದರೆ, ಈ ಕನಿಷ್ಠ ಜ್ಞಾನವೂ ಇಲ್ಲದೇ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಈ ರೀತಿ ಸಚಿವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಅವರು ಕೂಡಲೇ ಸಚಿವರ ಮತ್ತು ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿ ತಮ್ಮ ಖಾತೆಯನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತಿದ್ದಾರೆ. ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚದೇ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಪ್ರಯತ್ನಿಸುತ್ತಿದ್ದಾರೆ. ಅವರ ಅವಧಿಯಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯ ಫಲಿತಾಂಶದಲ್ಲಿ ಪ್ರಗತಿ ಕಂಡಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಸಾವಿರಾರು ಕೆ.ಪಿ.ಎಸ್. ಶಾಲೆಗಳನ್ನು ತೆರೆಯುವ ಕೆಲಸ ಮಾಡುತ್ತಿದ್ದಾರೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಇದನ್ನು ಸಹಿಸದ ಬಿಜೆಪಿಯವರು ಸಚಿವರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು 420 ಯೋಜನೆಗಳು ಎಂದು ಕರೆದಿರುವುದು ಎಷ್ಟರ ಮಟ್ಟಿಗೆ ಸರಿ? ಬಿಜೆಪಿ ಜಿಲ್ಲಾಧ್ಯಕ್ಷರು ತಮ್ಮ ಪಕ್ಷದ ಮಾಜಿ ಗೃಹಸಚಿವರು, ಶಾಸಕರು ಆಗಿರುವ ಆರಗ ಜ್ಞಾನೇಂದ್ರ ಅವರ ಮಾತಿನ ವೈಖರಿ ಬದಲಾಯಿಸಿಕೊಳ್ಳುವಂತೆ ಮೊದಲು ಮಾಡಲಿ, ಆನಂತರ ಶಿಕ್ಷಣ ಸಚಿವರ ಬಗ್ಗೆ ಮಾತನಾಡಲಿ ಎಂದು ಎಚ್ಚರಿಸಿದ್ದಾರೆ.