*ಫೆ.28 ರಿಂದ ಪಿಯುಸಿ ಪರೀಕ್ಷೆ-ಸಕಲ ಸಿದ್ದತೆಗೆ ಸೂಚನೆ : ಪ್ರಭುಲಿಂಗ ಕವಳಿಕಟ್ಟಿ* 41 ಪರೀಕ್ಷಾ ಕೇಂದ್ರಗಳಲ್ಲಿ  ಪರೀಕ್ಷೆ ಸಚಿವ ಮಧು ಬಂಗಾರಪ್ಪರಿಂದ ಪಿಯುಸಿ ಪರೀಕ್ಷೆ ಕುರಿತು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓಗಳ ಜೊತೆ ವಿಡಿಯೋ ಕಾನ್ಫರೆನ್ಸ್

*ಫೆ.28 ರಿಂದ ಪಿಯುಸಿ ಪರೀಕ್ಷೆ-ಸಕಲ ಸಿದ್ದತೆಗೆ ಸೂಚನೆ : ಪ್ರಭುಲಿಂಗ ಕವಳಿಕಟ್ಟಿ*

41 ಪರೀಕ್ಷಾ ಕೇಂದ್ರಗಳಲ್ಲಿ  ಪರೀಕ್ಷೆ

ಸಚಿವ ಮಧು ಬಂಗಾರಪ್ಪರಿಂದ ಪಿಯುಸಿ ಪರೀಕ್ಷೆ ಕುರಿತು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓಗಳ ಜೊತೆ ವಿಡಿಯೋ ಕಾನ್ಫರೆನ್ಸ್

ಶಿವಮೊಗ್ಗ

ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಜಿಲ್ಲೆಯ ಒಟ್ಟು 41 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಶಾಂತಿಯುತವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಯನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.

ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಪಿಯುಸಿ ಪರೀಕ್ಷೆ ಕುರಿತು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಮತ್ತು ತಂಡಕ್ಕೆ ಸಲಹೆ-ಸೂಚನೆಗಳನ್ನು ನೀಡಲು ಆಯೋಜಿಸಿದ್ದ ವಿಡಿಯೋ ಕಾನ್ಫರೆನ್ಸ್ ಸಭೆಯ ನಂತರ ಜಿಲ್ಲಾಡಳಿತ ಕಚೇರಿಯಲ್ಲಿ ನಡೆಸಿದ ದ್ವಿತೀಯ ಪಿಯುಸಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಒಟ್ಟು 19,009 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ರೆಗ್ಯೂಲರ್ ವಿದ್ಯಾರ್ಥಿಗಳು 17,755, ರಿಪೀಟರ್ ವಿದ್ಯಾರ್ಥಿಗಳು 871, ಖಾಸಗಿ- 380 ಮತ್ತು ಇಂಪ್ರೂವ್‌ಮೆAಟ್ -03 ವಿದ್ಯಾರ್ಥಿಗಳಿದ್ದಾರೆ.
ಪರೀಕ್ಷಾ ಕೇಂದ್ರಗಳು :- ಶಿವಮೊಗ್ಗ-17, ಭದ್ರಾವತಿ -06, ತೀರ್ಥಹಳ್ಳಿ- 03, ಹೊಸನಗರ -03 ಸಾಗರ -05, ಶಿಕಾರಿಪುರ-05, ಸೊರಬ-02 ಒಟ್ಟು 41 ಪರೀಕ್ಷಾ ಕೇಂದ್ರಗಳಿವೆ. ಪ್ರಶ್ನೆ ಪತ್ರಿಕೆ ವಿತರಕ ಮಾರ್ಗಗಳು -12 ಇವೆ. ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿ ಸದಸ್ಯ ಸಮಿತಿಯನ್ನು ನೇಮಿಸಿ ಆದೇಶಿಸಿದ್ದು, ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ.
ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಾಟ ಮಾಡುವ ತ್ರಿ ಸದಸ್ಯ ಸಮಿತಿ ವಾಹನಕ್ಕೆ ಪೋಲಿಸ್ ಸಿಬ್ಬಂದಿ ನೇಮಿಸಲು ಹಾಗೂ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವ ಬಗ್ಗೆ ಪೋಲಿಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಾಣಿಕೆ ಮಾಡುವ ವಾಹನಕ್ಕೆ ಜಿ.ಪಿ. ಎಸ್ .ಅಳವಡಿಸಿ ಮಾನಿಟರ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಠೇವಣೀಕರಿಸಿರುವ ಮತ್ತು ವಿತರಿಸುವ ಬಗ್ಗೆ 24*7 ಸಿ.ಸಿ.ಟಿ.ವಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಅಳವಡಿಸಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಮಕ್ಕಳಿಗೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇದ್ದು ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ನವರು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಜಿ.ಪಂ ಸಿಇಓ ಹೇಮಂತ್ ಎನ್ ಮಾತನಾಡಿ, ಪರೀಕ್ಷಾ ಕೇಂದ್ರದ ಅಧೀಕ್ಷಕರಿಗೆ ತರಬೇತಿ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ. ಇಲಾಖೆಯಿಂದ ತಾಲ್ಲೂಕು ಮತ್ತು ಜಿಲ್ಲಾ ಹಂತದಲ್ಲಿ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ಜಾಗೃತದಳದ ಸಿಬ್ಬಂದಿಯನ್ನು ನೇಮಿಸಲಾಗುವುದು.
ವೆಬ್ ಕ್ಯಾಸ್ಟಿಂಗ್ : ವೆಬ್ ಕ್ಯಾಸ್ಟಿಂಗ್‌ಗಾಗಿ ಈಗಾಗಲೇ ಸಿಬ್ಬಂದಿ ನೇಮಕ ಮಾಡಲಾಗಿದೆ. ಪರೀಕ್ಷಾ ವೇಳೆಯಲ್ಲಿ ವೆಬ್ ಕ್ಯಾಸ್ಟಿಂಗ್‌ಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಆದ್ದರಿಂದ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ನವರು ಕ್ರಮ ವಹಿಸಬೇಕು ಎಂದು ತಿಳಿಸಿದರು.
ದೂರದ ಊರುಗಳಿಂದ ಬರುವ, ಬಸ್ ವ್ಯವಸ್ಥೆ ಸಮರ್ಪಕವಾಗಿ ಇಲ್ಲದಿರುವೆಡೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗುವುದು. ಬಿಇಓ ಗಳು ಅಂತಹ ಊರುಗಳನ್ನು ಗುರುತಿಸಿ ಪಟ್ಟಿ ನೀಡುವಂತೆ ಸೂಚನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ : ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಸಿಇಓ ಮತ್ತು ತಂಡದೊAದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು, ಪಿಯುಸಿ ಪರೀಕ್ಷೆಗಳು ಶಾಂತಿಯುತವಾಗಿ ನಡೆಯುವಂತೆ ಸಕಲ ಸಿದ್ದತೆ ಮಾಡಿಕೊಳ್ಳಬೇಕು. ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗುವಂತೆ ಕ್ರಮ ವಹಿಸಬೇಕು. ಯಾವುದೇ ಗೊಂದಲ ಮತ್ತು ಭಯಕ್ಕೀಡಾಗದಂತೆ ನಿರಾತಂಕವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆಗಳನ್ನು ಮಾಡಿಕೊಡಬೇಕು. ಪರೀಕ್ಷೆ ಕುರಿತು ಯಾವುದೇ ರೀತಿಯ ವದಂತಿಗಳು, ಸೋಷಿಯಲ್ ಮೀಡಿಯಾದಲ್ಲಿನ ನಕಲಿ ಸುದ್ದಿಗಳಿಗೆ ಕಿವಿಗೊಡದೆ ವಿದ್ಯಾರ್ಥಿಗಳು ನಿರ್ಭಯವಾಗಿ ಪರೀಕ್ಷೆಗಳನ್ನು ಎದುರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಸಿಸಿ ಟಿವಿ, ವೆಬ್‌ಕಾಸ್ಟಿಂಗ್ ಮತ್ತು ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕಾರಿಯಪ್ಪ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.