*ಶಾಲಾ ಮಕ್ಕಳ ಮುಂದೆ ದ್ವೇಷದ ಮಾತು: ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ* – ʼದೂರುಗಳಿಗಾಗಿ ಕಾಯದೆ ಇಲಾಖೆಯಿಂದಲೇ ಕ್ರಮ ಕೈಗೊಳ್ಳುತ್ತೇವೆʼ – ʼಶಿವಮೊಗ್ಗ ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಬಿಡುವುದಿಲ್ಲʼ
*ಶಾಲಾ ಮಕ್ಕಳ ಮುಂದೆ ದ್ವೇಷದ ಮಾತು: ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ*
– ʼದೂರುಗಳಿಗಾಗಿ ಕಾಯದೆ ಇಲಾಖೆಯಿಂದಲೇ ಕ್ರಮ ಕೈಗೊಳ್ಳುತ್ತೇವೆʼ
– ʼಶಿವಮೊಗ್ಗ ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಬಿಡುವುದಿಲ್ಲʼ
ಬೆಂಗಳೂರು, ನ. 16
ಜನಪ್ರತಿನಿಧಿಯಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಶಾಲಾ ಮಕ್ಕಳ ಮುಂದೆ ದ್ವೇಷಪೂರಿತ ಹಾಗೂ ಅಸಂವಿಧಾನಿಕ ಮಾತುಗಳನ್ನಾಡಿರುವುದು ಸರಿಯಲ್ಲ. ಮಕ್ಕಳಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಳ್ತಂಗಡಿ ಶಾಸಕರಾಗಿರುವ ಹರೀಶ್ ಪೂಂಜಾ ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಯ ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷದ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದರಲ್ಲದೆ, ದ್ವೇಷದ ಭಾಷಣ ಮಾಡಿದ್ದರು. ಈ ಬಗ್ಗೆ ಸಚಿವ ಮಧು ಬಂಗಾರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ರಾಜಕಾರಣವನ್ನು ರಾಜಕೀಯ ವೇದಿಕೆಗಳಿಗೆ ಸೀಮಿತಗೊಳಿಸಬೇಕು. ಶಾಲೆಗಳಲ್ಲಿ ಈ ರೀತಿ ಮಾತನಾಡುವುದು ಸರಿಯಲ್ಲ. ಶಾಸಕರಿಗೆ ಕನಿಷ್ಠ ಸಾಮಾನ್ಯ ತಿಳುವಳಿಕೆ ಇರಬೇಕಲ್ಲವೇ? ಅವರ ಮನಸ್ಸಿನಲ್ಲಿ ವಿಷವಿದ್ದರೆ ಅದನ್ನೇ ಹೊರಹಾಕುತ್ತಾರೆ. ಈ ವಿಚಾರವನ್ನು ನಾವು ಸುಮ್ಮನೆ ಬಿಡುವುದಿಲ್ಲ. ಶಾಸಕರು ಏನು ಮಾತನಾಡಿದ್ದಾರೆ ಎಂಬ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ವರದಿಯ ಆಧಾರದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ದೂರು ನೀಡಲು ಮುಂದೆ ಬಂದರೂ ಸ್ವಾಗತಿಸುತ್ತೇವೆ. ಆದರೆ, ದೂರುಗಳಿಗಾಗಿ ಕಾಯದೆ ಇಲಾಖೆಯಿಂದಲೇ ಕ್ರಮ ಕೈಗೊಳ್ಳುತ್ತೇವೆ ಎಂದರು.
*ಶಾಲೆಗಳಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ*
ಶಾಲೆಗಳು ದೇವಸ್ಥಾನಗಳಿದ್ದಂತೆ. ಅಂತಹ ಪವಿತ್ರ ಸ್ಥಳದಲ್ಲಿ ರಾಜಕೀಯ ಮಾತನಾಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ ಸಚಿವರು, ರಾಜಕಾರಣಕ್ಕಾಗಿ ಈಗಾಗಲೇ ದೇವಸ್ಥಾನಗಳನ್ನು ಬಳಸಿಕೊಂಡಿರುವವರು ಇದೀಗ ಶಾಲೆಗಳಿಗೂ ನೇರವಾಗಿ ಪ್ರವೇಶಿಸುತ್ತಿದ್ದಾರೆ. ಜನರು ಇಂತಹ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಶಿಕ್ಷಣ ಸಚಿವನಾಗಿ ಈ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಅವರು ಕ್ಷಮೆ ಕೇಳುತ್ತಾರೋ ಇಲ್ಲವೋ ಎಂಬುದು ಮುಖ್ಯವಲ್ಲ. ಕಾನೂನು ಪ್ರಕಾರ ಕೈಗೊಳ್ಳಬೇಕಾದ ಕ್ರಮವನ್ನು ಖಂಡಿತ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
*ಶಿವಮೊಗ್ಗ ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಬಿಡುವುದಿಲ್ಲ*
ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಿಮಾನ ನಿಲ್ದಾಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ತನ್ನಿಂದ ಸಾಧ್ಯವಾದ ಎಲ್ಲ ಸಹಕಾರವನ್ನೂ ನೀಡುತ್ತಿದೆ. ಉಡಾನ್ ಯೋಜನೆ ಕೇಂದ್ರ ಸರ್ಕಾರದ್ದಾಗಿದ್ದು, ಈ ಬಗ್ಗೆ ಕೇಂದ್ರದೊಂದಿಗೆ ಮಾತನಾಡಬೇಕಿದೆ ಎಂದರು.
ಸುಮಾರು 200 ಕೋಟಿ ರೂ. ಯೋಜನೆ ಎಂದು ಆರಂಭವಾದ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗೆ ಅಂತಿಮವಾಗಿ 600 ಕೋಟಿ ರೂ.ವರೆಗೂ ವೆಚ್ಚವಾಗಿದೆ. ರಾಜ್ಯ ಸರ್ಕಾರದ ಶ್ರಮ ಮತ್ತು ಹಣದಲ್ಲಿ ಯೋಜನೆ ರೂಪಿಸಿ, ನಂತರ ಅದನ್ನು ಮುಚ್ಚುವ ಹಂತಕ್ಕೆ ತಂದು ಅಂಬಾನಿ, ಅದಾನಿ ಅವರಂಥ ಖಾಸಗಿ ಉದ್ಯಮಿಗಳಿಗೆ ಮಾರಾಟ ಮಾಡುವ ಉದ್ದೇಶ ಬಿಜೆಪಿಯದ್ದಾಗಿದೆ ಎಂದು ಆರೋಪಿಸಿದರು.
ಈ ಸಂಬಂಧ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೂ ಚರ್ಚಿಸಿದ್ದೇನೆ. ಯಾವುದೇ ಕಾರಣಕ್ಕೂ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಖಾಸಗೀಕರಣಕ್ಕೆ ಬಿಟ್ಟುಕೊಡುವುದಿಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಉದ್ಘಾಟಿಸಿ ಪ್ರಚಾರ ಪಡೆದುಕೊಂಡರು. ಆದರೆ, ಉದ್ಘಾಟನೆಯ ಬಳಿಕ ಆರಂಭದಲ್ಲಿ ಹಲವು ತಿಂಗಳು ವಿಮಾನ ಹಾರಾಟವೇ ಇರಲಿಲ್ಲ. ರಾಜ್ಯ ಸರ್ಕಾರವೇ ಪ್ರಯತ್ನಪಟ್ಟು ವಿಮಾನ ಸಂಚಾರ ಆರಂಭಿಸಲು ಶ್ರಮಿಸಿತು ಎಂದು ಹೇಳಿದರು.
*ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ*
ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಐಟಿ ಮತ್ತು ಇ.ಡಿ. ಸಂಸ್ಥೆಗಳನ್ನು ಬಳಸಿಕೊಂಡು ಎಷ್ಟು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸಲಾಗಿದೆ? ಬಿಜೆಪಿ ನಾಯಕರ ವಿರುದ್ಧ ಎಷ್ಟು ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ಹಾಳು ಮಾಡುತ್ತಿರುವಷ್ಟು ಬೇರೆ ಯಾರೂ ಮಾಡಿಲ್ಲ. ಮಕ್ಕಳ ಮುಂದೆ ಶಾಸಕ ಹರೀಶ್ ಪೂಂಜಾ ಮಾತನಾಡುವ ಅಗತ್ಯವೇನಿತ್ತು? ಮಕ್ಕಳ ಮನಸ್ಸಿನಲ್ಲಿಯೂ ದ್ವೇಷದ ಬೀಜ ಬಿತ್ತುವ ಉದ್ದೇಶ ಅವರದ್ದಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನವೇ ಬಿಜೆಪಿ ಜಾರಿಗೆ ತಂದಿದ್ದ ದ್ವೇಷಪೂರಿತ ಪಠ್ಯಗಳನ್ನು ತೆಗೆದುಹಾಕುವುದಾಗಿ ಭರವಸೆ ನೀಡಿತ್ತು. ಅದರಂತೆ ಶಿಕ್ಷಣ ಸಚಿವನಾಗಿ ಪಠ್ಯಪುಸ್ತಕ ಪರಿಷ್ಕರಣೆ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು.
ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ನೀಡುತ್ತಿರುವ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಸಮರ್ಥ ನಾಯಕತ್ವದ ಕೊರತೆಯಿದೆ. ಸಮಾಜದಲ್ಲಿ ಕೆಟ್ಟ ವಿಚಾರಗಳನ್ನು ಹರಡುವುದೇ ಬಿಜೆಪಿಯ ರಾಜಕಾರಣವಾಗಿದೆ ಎಂದು ಟೀಕಿಸಿದರು.
*ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು*
ಹಿರಿಯೂರು ಉಪಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಏನೇ tvತಂತ್ರ, ಹುನ್ನಾರ ರೂಪಿಸಿದರೂ ಅಂತಿಮವಾಗಿ ಗೆಲುವು ಕಾಂಗ್ರೆಸ್ ಪಕ್ಷದ್ದೇ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


