ಶಿವಮೊಗ್ಗದಲ್ಲಿ ₹13.50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕೆಪಿಎಸ್ ಶಾಲೆ ನಿರ್ಮಾಣ; ಕಾಮಗಾರಿ ಪರಿಶೀಲಿಸಿದ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗದಲ್ಲಿ ₹13.50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕೆಪಿಎಸ್ ಶಾಲೆ ನಿರ್ಮಾಣ; ಕಾಮಗಾರಿ ಪರಿಶೀಲಿಸಿದ ಸಚಿವ ಮಧು ಬಂಗಾರಪ್ಪ
ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಹಾಗೂ ಎಜಾಕ್ಸ್ ಇಂಜಿನಿಯರಿಂಗ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ₹13.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ನೂತನ ಕಟ್ಟಡದ ಕಾಮಗಾರಿಯನ್ನು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಕೆ ಮಧು ಬಂಗಾರಪ್ಪ ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿ ಹಾಗೂ ಕಟ್ಟಡದ ವಿನ್ಯಾಸದ ಕುರಿತು ಅಧಿಕಾರಿಗಳು ಮತ್ತು ಸಂಸ್ಥೆಯ ಪ್ರತಿನಿಧಿಗಳಿಂದ ಮಾಹಿತಿ ಪಡೆದರು.
ಬಳಿಕ ಮಾತನಾಡಿದ ಸಚಿವರು, “ಎಜಾಕ್ಸ್ ಸಂಸ್ಥೆಯವರು ಅತ್ಯಂತ ವೇಗವಾಗಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿದ್ದು, ಗುಣಮಟ್ಟದ ಹಾಗೂ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಶಾಲಾ ಕಟ್ಟಡ ನಿರ್ಮಾಣವಾಗುತ್ತಿದೆ. ನಮ್ಮ ಇಲಾಖೆಯ ‘ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ’ (CCSR) ಉಪಕ್ರಮದಡಿ ಎಜಾಕ್ಸ್ ಸಂಸ್ಥೆಯವರು ₹13.50 ಕೋಟಿ ವೆಚ್ಚದಲ್ಲಿ ಈ ಕಟ್ಟಡವನ್ನು ನಿರ್ಮಿಸುತ್ತಿರುವುದು ಶ್ಲಾಘನೀಯ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕಾರ್ಪೊರೇಟ್ ಸಂಸ್ಥೆಗಳು ಕೈಜೋಡಿಸುತ್ತಿರುವುದು ಸಂತಸದ ಸಂಗತಿ” ಎಂದರು.
“ನೂತನ ಶಾಲಾ ಕಟ್ಟಡದಲ್ಲಿ 33 ಸುಸಜ್ಜಿತ ತರಗತಿ ಕೊಠಡಿಗಳು, ಸ್ಮಾರ್ಟ್ ಕ್ಲಾಸ್ರೂಮ್ಗಳು, ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಮತ್ತು STEAM ಪ್ರಯೋಗಾಲಯ, ಮುಖ್ಯ ಶಿಕ್ಷಕರಿಗೆ ಪ್ರತ್ಯೇಕ ಕಚೇರಿ, ಪ್ರತಿ ಮಹಡಿಯಲ್ಲೂ ಶಿಕ್ಷಕರಿಗೆ ಪ್ರತ್ಯೇಕ ಕೊಠಡಿ, ಆರ್ಟ್ ಮತ್ತು ಕ್ರಾಫ್ಟ್ ಕೊಠಡಿ ಹಾಗೂ ಪಠ್ಯೇತರ ಚಟುವಟಿಕೆಗಳಿಗಾಗಿ ಪ್ರತ್ಯೇಕ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ” ಎಂದು ಹೇಳಿದರು.
“ಇದರೊಂದಿಗೆ ವಿಶಾಲವಾದ ಡೈನಿಂಗ್ ಹಾಲ್, ಸುಸಜ್ಜಿತ ಅಡುಗೆಮನೆ, ಪ್ರತಿ ಮಹಡಿಯಲ್ಲೂ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ವಿಶಾಲವಾದ ಸುಸಜ್ಜಿತ ಆಟದ ಮೈದಾನವನ್ನು ಅಭಿವೃದ್ಧಿಪಡಿಸಲಾಗುತ್ತಿದೆ” ಎಂದು ತಿಳಿಸಿದರು.
“ಇದೇ ಮಾದರಿಯಲ್ಲಿ ರಾಜ್ಯದಾದ್ಯಂತ ಸಿಸಿಎಸ್ಆರ್ ನಿಧಿಯನ್ನು ಸಮರ್ಪಕವಾಗಿ ಬಳಸಿಕೊಂಡು ಕರ್ನಾಟಕ ಪಬ್ಲಿಕ್ ಸ್ಕೂಲ್ಗಳನ್ನು ಉನ್ನತೀಕರಿಸುವ ಸಮಗ್ರ ಯೋಜನೆಯನ್ನು ರೂಪಿಸಲಾಗಿದೆ. ಪ್ರತಿಯೊಂದು ಮಗುವಿಗೂ ಸಮಾನ ಅವಕಾಶದೊಂದಿಗೆ ಗುಣಮಟ್ಟದ ಶಿಕ್ಷಣ, ಉತ್ತಮ ಕಲಿಕಾ ವಾತಾವರಣ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದೇ ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ” ಎಂದು ಸಚಿವರು ಹೇಳಿದರು.


