ಶಿವಮೊಗ್ಗ: ಮಹಾತ್ಮ ಗಾಂಧಿಜಿ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯಲ್ಲಿ ಜ. ೨೧ ರಂದು ಮಧ್ಯಾಹ್ನ ೨ ಗಂಟೆಗೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಘೋಷಣೆಯಡಿಯಲ್ಲಿ ಈ ಸಮಾವೇಶ ನಡೆಯುತ್ತಿದೆ. ಈ ಹಿಂದೆ ಡಿಸೆಂಬರ್ ೨೧ರಂದು ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ರದ್ದಾಗಿತ್ತು. ಈಗ ಜ. ೨೧ರಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.
೧೦೦ ವರ್ಷದ ನೆನಪಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಕಾಂಗ್ರೆಸ್ ನಾಯಕರು, ಸಂಸದರು ಭಾಗವಹಿಸಲಿದ್ದಾರೆ ಎಂದರು.
ಶಿವಮೊಗ್ಗ ಜಿಲ್ಲೆಯಿಂದಲೂ ಕೂಡ ಸುಮಾರು ೩ ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯರ್ತರು, ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಮಾವೇಶ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಅಂದು ಬೆಳಗ್ಗೆ ೧೨ ಗಂಟೆಗೆ ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷಾತೀತವಾಗಿ ಎಲ್ಲಾ ಗಣ್ಯರು ಉಪಸ್ಥಿತರಿರುತ್ತಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ಪ್ರಮುಖರಾದ ಜಿ.ಡಿ. ಮಂಜುನಾಥ್, ಎಸ್.ಟಿ. ಹಾಲಪ್ಪ, ಶಿವಕುಮಾರ್, ಇಕ್ಕೇರಿ ರಮೇಶ್, ಶಿವಣ್ಣ, ಮಧು, ಧನರಾಜ್, ರಮೇಶ್ ಹೆಗ್ಡೆ, ಶಿ.ಜು. ಪಾಶ, ಮುಂತಾದವರಿದ್ದರು.