ಐದು ವಿದ್ಯಾರ್ಥಿ ವಸತಿ ನಿಲಯ ಮಂಜೂರು* :*ಸಚಿವ ಎಸ್. ಮಧು ಬಂಗಾರಪ್ಪ
ಐದು ವಿದ್ಯಾರ್ಥಿ ವಸತಿ ನಿಲಯ ಮಂಜೂರು* :*ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲೆಗೆ ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳು ಈ ನಿಲಯಗಳ ಪ್ರಯೋಜನ ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಹೊರವಲಯ ಬೊಮ್ಮನಕಟ್ಟೆಯಲ್ಲಿನ ಇಂದಿರಾಗಾಂಧಿ ನರ್ಸಿಂಗ್ ಮಹಿಳಾ ವಿದ್ಯಾರ್ಥಿ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಶಿವಮೊಗ್ಗ, ಸೊರಬ, ಸಾಗರ, ಶಿರಾಳಕೊಪ್ಪ, ತೀರ್ಥಹಳ್ಳಿಯಲ್ಲಿ ಈ ವಸತಿ ನಿಲಯ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಎರಡು ಮೆಟ್ರಿಕ್ ವಿದ್ಯಾಲಯಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಇಲ್ಲಿ ₹24 ಕೋಟಿ ಮೊತ್ತದಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಅಂದಾಜು ₹5 ಕೋಟಿ ಮೊತ್ತದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ಇವರ ನಿರ್ವಹಣೆಯಲ್ಲಿ ಈ ವಿದ್ಯಾರ್ಥಿ ನಿಲಯ ಕಟ್ಟಡದ ಕಾಮಗಾರಿ ಮುಕ್ತಾಯಗೊಂಡಿದೆ. ಪ್ರಸ್ತುತ 100 ಹಾಸಿಗೆಯ ವಸತಿ ನಿಲಯ ಇದಾಗಿದ್ದು, ಇದನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ಬಿಸಿಎಂ ಇಲಾಖೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಫಲಿತಾಂಶ ಶೇ 93 ರಷ್ಟಿದೆ. ಇದು ಉತ್ತಮ ಬೆಳವಣಿಗೆಯಾಗಿದೆ. ಜಿಲ್ಲೆಯಲ್ಲಿ 137 ವಿದ್ಯಾರ್ಥಿ ನಿಲಯಗಳು ಇದ್ದು, ಅದರಲ್ಲಿ 14,106 ವಿದ್ಯಾರ್ಥಿಗಳು ವಾಸ್ತವ್ಯ ಹೂಡಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿ ನಿಲಯಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಲಾಗುವುದು ಎಂದರು.
ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದೆ. ಹಾಗೂ ಬಹಳ ಪಾರದರ್ಶಕವಾಗಿ ಪರೀಕ್ಷೆಯನ್ನು ನಡೆಸಲಾಗಿದೆ. ಈ ಬಾರಿ ಮೂರು ಅವಕಾಶಗಳನ್ನು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇದರಿಂದ ಶಿಕ್ಷಣ ಇಲಾಖೆಯಲ್ಲಿ ಹೊಸ ಕ್ರಾಂತಿ ಆಗಲಿದೆ ಎಂದರು.
ನರ್ಸಿಂಗ್ ವಿದ್ಯಾರ್ಥಿಗಳು ಈ ವಸತಿ ನಿಲಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ಶಾಸಕರಾದ ಶ್ರೀಮತಿ ಬಲ್ಕೀಸ್ ಬಾನು, ಡಾ. ಧನಂಜಯ ಸರ್ಜಿ, ಭೋವಿ ಅಭಿವೃದ್ಧಿ ನಿಗಮ ರಾಜ್ಯಾಧ್ಯಕ್ಷ ಎಸ್.ರವಿ ಕುಮಾರ್, ಶಿವಮೊಗ್ಗ– ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಎಸ್.ಚಂದ್ರ ಭೂಪಾಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಖೆ ಜಿಲ್ಲಾ ಅಧಿಕಾರಿ ಶ್ರೀಮತಿ ಕೆ.ಆರ್.ಶೋಭಾ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಪವಿತ್ರಾನಂದರಾಜು, ಪ್ರಮುಖರಾದ ಆರ್.ಪ್ರಸನ್ನ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.