ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ನೇಮಕ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ನೇಮಕ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ ಭದ್ರಾವತಿ ತಾಲ್ಲೂಕು ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಶಂಕರಘಟ್ಟದ ಎಂ ರಮೇಶ್ ಇವರನ್ನು ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ರಾಜ್ಯಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು ಹಾಗೂ ಶಿಕ್ಷಣ ಸಚಿವರಾದ ಎಸ್ ಮಧುಬಂಗಾರಪ್ಪನವರು ಈ ನೇಮಕ ಮಾಡಿದ್ದಾರೆ.

ರಮೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿಯನ್ನು ಪಡೆದುಕೊಂಡು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ಬಾರಿಯು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರಲ್ಲದೇ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು.

ಈ ಹಿಂದೆ ಅಧ್ಯಕ್ಷರಾಗಿದ್ದ ರಮೇಶ್ ಇಕ್ಕೇರಿಯವರನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಿದ ಹಿನ್ನಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ರಮೇಶ್ ಇವರನ್ನು ನೇಮಿಸಲಾಗಿದೆ.

ಇಂದು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರು ಆದೇಶದ ಪ್ರತಿಯನ್ನು ರಮೇಶ್ ರವರಿಗೆ ನೀಡಿ ಈ ಕೂಡಲೇ ಅಧಿಕಾರ ಸ್ವೀಕರಿಸಿ ಪಕ್ಷದ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಬಲ್ಕೀಷ್ ಬಾನು, ಹಾಪ್ ಕಾಮ್ಸ್ ಅಧ್ಯಕ್ಷರಾದ ವಿಜಯಕುಮಾರ್(ದನಿ) ಮೊದಲಾದವರು ಇದ್ದರು.